ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ; ಡಿಕೆ ಶಿವಕುಮಾರ್
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸುವ ಉದ್ದೇಶದಿಂದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೇ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಮತದಾನ ಶಿಸ್ತಿನಿಂದ ನಡೆಯಬೇಕು, ರ್ಯಾಗಿಂಗ್ ಹಾಗೂ ಹೊರಗಿನವರ ಹಸ್ತಕ್ಷೇಪಕ್ಕೆ ಅವಕಾಶ ಇರಬಾರದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ
- ರ್ಯಾಗಿಂಗ್ ಮುಕ್ತ ಕ್ಯಾಂಪಸ್ ನಿರ್ಮಾಣಕ್ಕೆ ಆದ್ಯತೆ
- ರಾಜ್ಯದಲ್ಲಿ 2 ಸಾವಿರ ಶಾಲೆಗಳ ದತ್ತು ಯೋಜನೆ
ಬೆಂಗಳೂರು (Bengaluru): ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಿಗೆ ನಾಯಕತ್ವದ ಅನುಭವ ಸಿಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು (Student Elections) ನಡೆಸಲು ನಿರ್ಧರಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಲೇಜು ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸಲು ಉತ್ತಮ ವೇದಿಕೆಯಾಗಲಿವೆ ಎಂದರು. ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಸಂಘಟನೆ, ಜವಾಬ್ದಾರಿ ಮತ್ತು ಜನರನ್ನು ಮುನ್ನಡೆಸುವ ಗುಣಗಳನ್ನು ಕಲಿಯಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ತಮ್ಮ ರಾಜಕೀಯ ಜೀವನದಲ್ಲೂ ಕಾಲೇಜು ಚುನಾವಣೆಗಳ ಅನುಭವ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ನೆನಪಿಸಿಕೊಂಡರು. ಪದವಿ ಅಂತಿಮ ವರ್ಷದಲ್ಲಿ ಓದುತ್ತಿದ್ದಾಗಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗಿ ತಿಳಿಸಿದರು. ಪಂಚಾಯಿತಿಯಿಂದ ಸಂಸತ್ತಿನವರೆಗೆ ನಾಯಕತ್ವ ಬೆಳೆಸುವ ಅವಕಾಶಗಳು ಸಿಗಬೇಕು. ಹೀಗಾಗಿ ವಿದ್ಯಾರ್ಥಿಗಳಿಗೆ ಈ ಅನುಭವವನ್ನು ನಿರಾಕರಿಸಬಾರದು ಎಂದು ಹೇಳಿದರು.
ಆದರೆ ಚುನಾವಣೆ ನಡೆಸುವಾಗ ಕಾಲೇಜುಗಳ ವಾತಾವರಣ ಹದಗೆಡಬಾರದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ವಿದ್ಯಾರ್ಥಿಗಳ ನಡುವೆ ಗಲಾಟೆ, ಹೊಡೆದಾಟ, ರ್ಯಾಗಿಂಗ್ (Ragging) ಅಥವಾ ಹೊರಗಿನವರ ಹಸ್ತಕ್ಷೇಪ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಾಲೇಜು ಆವರಣದಲ್ಲಿ ಶಿಸ್ತು ಮತ್ತು ಉತ್ತಮ ವಾತಾವರಣ ಕಾಪಾಡುವುದು ಆಡಳಿತ ಮಂಡಳಿಗಳ ಜವಾಬ್ದಾರಿ ಎಂದು ತಿಳಿಸಿದರು.
2 ಸಾವಿರ ಸರ್ಕಾರಿ ಶಾಲೆಗಳಿಗೆ ಹೊಸ ಯೋಜನೆ
ಕಾಲೇಜು ಶಿಕ್ಷಣದ ಜತೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ರಾಜ್ಯದ ಪಂಚಾಯಿತಿ ಮಟ್ಟದಲ್ಲಿ ಸುಮಾರು 2,000 ಸರ್ಕಾರಿ ಶಾಲೆಗಳನ್ನು ದತ್ತು (School Adoption) ಪಡೆದು ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದು ತಿಳಿಸಿದರು.
ಸಿಎಸ್ಆರ್ (CSR Funding) ನಿಧಿಯನ್ನು ಬಳಸಿಕೊಂಡು ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ. ಸಚಿವ ಎಚ್.ಸಿ.ಬಾಲಕೃಷ್ಣ ಅವರ ಕ್ಷೇತ್ರದಲ್ಲಿ ಪ್ರತಿ ಶಾಲೆಗೆ ಸುಮಾರು 13ರಿಂದ 14 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದನ್ನೂ ಅವರು ಉಲ್ಲೇಖಿಸಿದರು. ಹಿಂದೆ 400ರಿಂದ 500 ವಿದ್ಯಾರ್ಥಿಗಳಿದ್ದ ಕೆಲವು ಶಾಲೆಗಳಲ್ಲಿ ಈಗ 2,000 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲೂ ಈಗಾಗಲೇ 30 ಶಾಲೆಗಳನ್ನು ದತ್ತು ಪಡೆಯಲಾಗಿದೆ ಎಂದು ತಿಳಿಸಿದರು.
ಇದೇ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಹೊಸದಾಗಿ ಆಯ್ಕೆಯಾದ 222 ಪ್ರಾಂಶುಪಾಲರಿಗೆ ನೇಮಕಾತಿ ಆದೇಶಗಳನ್ನು ವಿತರಿಸಲಾಯಿತು. ‘ಶೈಕ್ಷಣಿಕ ಸಾರಥ್ಯ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂತನ ಪ್ರಾಂಶುಪಾಲರು ಕಾಲೇಜುಗಳ ಆಡಳಿತವನ್ನು ಸಮರ್ಥವಾಗಿ ಮುನ್ನಡೆಸುವುದರ ಜತೆಗೆ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.



