ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ, ಯುವತಿ ರಕ್ಷಣೆ! ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ ಕಸಬಾ ಗ್ರಾಮದ ಕ್ಯಾಂಟಿನ್‌ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

  • ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ಆರೋಪ
  • ದಾಳಿ ವೇಳೆ ಮೂವರು ಆರೋಪಿಗಳ ಬಂಧನ
  • ಯುವತಿಯನ್ನು ರಕ್ಷಿಸಿ ಹಣ ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ನಗರದ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ಕ್ಯಾಂಟಿನ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಸಾಕಷ್ಟು ಚರ್ಚೆ ಆರಂಭವಾಗಿದೆ.

ಬಂಧಿತರನ್ನು ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ, ನಾವೂರು ನಿವಾಸಿ ಉಸ್ಮಾನ್ ಹಾಗೂ ತಣ್ಣೀರುಪಂತ ಗ್ರಾಮದ ಕಲ್ಲೇರಿ ನಿವಾಸಿ ಹೈದರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕ್ಯಾಂಟಿನ್‌ ಆವರಣವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಭಾನುವಾರ ಕ್ಯಾಂಟಿನ್‌ಗೆ ರಜೆ ಇರುವುದನ್ನು ಬಳಸಿಕೊಂಡು ಒಳಭಾಗದಲ್ಲಿ ಪ್ರತ್ಯೇಕ ಕೊಠಡಿ ಹಾಗೂ ಶೌಚಾಲಯ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಗೆ ಮಹಿಳೆಯನ್ನು ಕರೆತಂದು ಹಣದಾಸೆಗೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯ ವೇಳೆ 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಸ್ಥಳದಿಂದ ಸುಮಾರು 5 ಸಾವಿರ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories