ಭೀಕರ ಅಪಘಾತ.. ಮೂವರು ಸ್ಥಳದಲ್ಲೇ ಸಾವು! ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಘಟನೆ
ಕೊಪ್ಪಳ ಜಿಲ್ಲೆಯ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಓಮಿನಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಮಂತ್ರಾಲಯಕ್ಕೆ ತೆರಳುತ್ತಿದ್ದ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಓಮಿನಿ ವಾಹನಕ್ಕೆ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ ಗ್ರಾಮದ ನಿವಾಸಿಗಳಾಗಿದ್ದು, ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25) ಹಾಗೂ ರಮೇಶ್ ಬಳ್ಳಾರಿ (45) ಎಂದು ಗುರುತಿಸಲಾಗಿದೆ. ಇವರು ಮಂತ್ರಾಲಯ ದರ್ಶನಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಉಳಿದ ಆರು ಮಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದು, ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಪೊಲೀಸರು ಹಾಗೂ ಸ್ಥಳೀಯರು ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.



