ಡಿಕೆಶಿ ಪ್ರಮಾಣವಚನ ಕಾರ್ಯಕ್ರಮ! ಈ ರಸ್ತೆಗಳಿಗೆ ಹೋದರೆ ಟ್ರಾಫಿಕ್‌ನಲ್ಲಿ ಸಿಲುಕುವುದು ಖಚಿತ

DK Shivakumar Oath Ceremony: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೇಂದ್ರ ಭಾಗದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಜಾರಿಯಾಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರು (Bengaluru): ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ (DK Shivakumar Oath Ceremony) ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಹೃದಯಭಾಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ದೇಶ ಹಾಗೂ ರಾಜ್ಯದ ಹಲವು ಗಣ್ಯರು ಆಗಮಿಸುತ್ತಿರುವುದರಿಂದ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಿಶೇಷ ಟ್ರಾಫಿಕ್ ನಿಯಮಗಳು ಜಾರಿಯಲ್ಲಿರಲಿವೆ.

ಲೋಕಭವನದ ಗಾಜಿನ ಮನೆಯಲ್ಲಿ ಸಂಜೆ 4.05ಕ್ಕೆ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಹಲವು ಸಚಿವರು ಕೂಡ ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆ ಲೋಕಭವನ, ರೇಸ್‌ಕೋರ್ಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಒ ಜಂಕ್ಷನ್‌ವರೆಗೆ, ಸಿ.ಟಿ.ಒ ವೃತ್ತದಿಂದ ಲೋಕಭವನದವರೆಗೆ, ಬಾಳೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆಗೆ, ಕೆ.ಆರ್. ಸರ್ಕಲ್‌ನಿಂದ ಕಾಫಿ ಬೋರ್ಡ್ ಜಂಕ್ಷನ್‌ವರೆಗೆ ಸೇರಿದಂತೆ ಹಲವು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಾರ್ಯಕ್ರಮಕ್ಕೆ ಅನುಮತಿ ಪಡೆದ ವಾಹನಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ಇದೇ ವೇಳೆ ಕ್ವೀನ್ಸ್ ರಸ್ತೆ, ಕನ್ನಿಂಗ್‌ಹ್ಯಾಮ್ ರಸ್ತೆ, ನೃಪತುಂಗ ರಸ್ತೆ, ಶಿವಾನಂದ ಜಂಕ್ಷನ್ ಹಾಗೂ ಎಸ್.ಸಿ. ರಸ್ತೆಯ ಮೂಲಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸಾಧ್ಯವಾದಷ್ಟು ಈ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಸಂಚಾರ ದಟ್ಟಣೆ ತಪ್ಪಿಸಲು ಕೆಲವು ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ. ಅಂಬೇಡ್ಕರ್ ರಸ್ತೆ, ಲೋಕಭವನ ರಸ್ತೆ, ಕ್ವೀನ್ಸ್ ರಸ್ತೆ, ರೇಸ್‌ಕೋರ್ಸ್ ರಸ್ತೆ, ಕಸ್ತೂರಬಾ ರಸ್ತೆ, ಪ್ಯಾಲೇಸ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ ಇರುವುದಿಲ್ಲ.

ಕಾರ್ಯಕ್ರಮಕ್ಕೆ ಪಾಸ್ ಹೊಂದಿರುವ ವಾಹನಗಳಿಗೆ ವಿಧಾನಸೌಧ, ವಿಕಾಸಸೌಧ, ರಾಜಭವನ ಹಿಂಭಾಗದ ಪಾರ್ಕಿಂಗ್ ಪ್ರದೇಶ ಹಾಗೂ ನೆಹರು ತಾರಾಲಯದ ಬಳಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಪಾಸ್ ಇಲ್ಲದ ವಾಹನಗಳಿಗೆ ಕಂಠೀರವ ಕ್ರೀಡಾಂಗಣ, ಯುಬಿ ಸಿಟಿ, ಶಿವಾಜಿನಗರ ಮಲ್ಟಿಲೆವೆಲ್ ಪಾರ್ಕಿಂಗ್ ಹಾಗೂ ಪ್ಯಾಲೇಸ್ ಮೈದಾನದಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ನಗರದ ಕೇಂದ್ರ ಭಾಗದ ಮೂಲಕ ಸಂಚರಿಸುವವರು ಸಮಯಕ್ಕೆ ಮುಂಚಿತವಾಗಿ ಪ್ರಯಾಣ ಯೋಜನೆ ರೂಪಿಸಿಕೊಳ್ಳುವುದು ಒಳಿತು ಎಂದು ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories