ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ! ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವು
ರಾಮನಗರದ ಅವರಗೆರೆ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಸೈನ್ ಬೋರ್ಡ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ, ಆಗಸ್ಟ್ 08: ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ ಗೇಟ್ ಸಮೀಪ ಕೇರಳ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬೃಹತ್ ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್ ಅವರಗೆರೆ ಗೇಟ್ ಬಳಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸೈನ್ ಬೋರ್ಡ್‌ಗೆ ರಭಸವಾಗಿ ಡಿಕ್ಕಿ ಹೊಡೆದ ಬಳಿಕ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ.
ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬಿಡದಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸುವ ಕಾರ್ಯ ನಡೆಸಲಾಗಿದೆ.
ಬಸ್ ಪಲ್ಟಿಯಾದ ಪರಿಣಾಮ ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಅಪಘಾತಕ್ಕೀಡಾದ ಬಸ್ ತೆರವುಗೊಳಿಸುವ ಹಾಗೂ ಸಂಚಾರವನ್ನು ಸಹಜ ಸ್ಥಿತಿಗೆ ತರುವ ಕಾರ್ಯ ಕೈಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



