ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು
ನಂಜನಗೂಡು ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ, ನಾಲ್ವರು ಗಾಯಗೊಂಡಿದ್ದಾರೆ. ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರ ಸಾವು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ.

- ಎಕ್ಸ್ಪ್ರೆಸ್ವೇ ಅಪಘಾತದಲ್ಲಿ ಇಬ್ಬರು ಸಾವು
- ಎಂಟು ವರ್ಷದ ಬಾಲಕಿ ರಿತ್ವಿಕಾ ದುರ್ಮರಣ
- ನಾಲ್ವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಮಂಡ್ಯ: ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಬರಬೇಕೆಂಬ ಉದ್ದೇಶದಿಂದ ಹೊರಟಿದ್ದ ಕುಟುಂಬದ ಪ್ರಯಾಣ ದಾರಿಯಲ್ಲೇ ದುರಂತಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಸಂಭವಿಸಿದ ಭೀಕರ ಅಪಘಾತದಲ್ಲಿ 49 ವರ್ಷದ ವ್ಯಕ್ತಿ ಹಾಗೂ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಮುಂದೆ ಸಾಗುತ್ತಿದ್ದ ಸರಕು ಸಾಗಣೆ ಲಾರಿಗೆ (Goods Lorry) ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮಹದೇವು (49) ಮತ್ತು ರಿತ್ವಿಕಾ (8) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಮಹದೇವು ಮಂಡ್ಯದ ಗುತ್ತಲು ಬಡಾವಣೆಯ ನಿವಾಸಿಯಾಗಿದ್ದು, ಬಾಲಕಿ ರಿತ್ವಿಕಾ ತೈಲೂರು ಗ್ರಾಮದವಳು ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ (Nanjangud Temple) ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ (Mysuru Hospital) ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೊಂದು ದುಃಖದ ಸಂಗತಿಯೆಂದರೆ, ಅಪಘಾತಕ್ಕೂ ಸ್ವಲ್ಪ ಸಮಯ ಮೊದಲು ಕುಟುಂಬದ ಸದಸ್ಯರು ಕಾರಿನಲ್ಲೇ ವಿಡಿಯೋ ರೀಲ್ಸ್ (Video Reels) ಮಾಡಿದ್ದರು ಎನ್ನಲಾಗಿದೆ. ಅದನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿಯೂ ಹಂಚಿಕೊಂಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಆದರೆ, ಕೆಲವೇ ಸಮಯದಲ್ಲಿ ಸಂಭ್ರಮದ ಪ್ರಯಾಣ ಸಾವಿನ ಸುದ್ದಿಯಾಗಿ ಬದಲಾಗಿರುವುದು ಸಂಬಂಧಿಕರನ್ನು ಕಣ್ಣೀರಲ್ಲಿ ಮುಳುಗಿಸಿದೆ.
ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.



