ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು

87 ವರ್ಷದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಎದೆ ನೋವಿನಿಂದ ನಿನ್ನೆ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭಾನುವಾರ ಸಂಜೆ ರಾಷ್ಟ್ರ ರಾಜಧಾನಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಖಿಲ ಭಾರತ, ಮಾಜಿ ಪ್ರಧಾನಿ ಚೇತರಿಕೆಗಾಗಿ ಪ್ರಾರ್ಥಿಸುತ್ತಿದೆ, ರಾಷ್ಟ್ರದ ಹಲವು ನಾಯಕರು ಮನಮೋಹನ್ ಸಿಂಗ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ.

ನವದೆಹಲಿ ( Kannada News ) :  ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿದೆ. 87 ವರ್ಷದ ಮಾಜಿ ಪ್ರಧಾನ ಮಂತ್ರಿ  ಡಾ.ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, 8:45 ರ ವೇಳೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ಹರಡುತ್ತಿದ್ದಂತೆ, ರಾಜಕೀಯ ವ್ಯಕ್ತಿಗಳು ಹಾಗೂ ಹಲವು ನಾಯಕರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಚೇತರಿಕೆಗೆ ಹಲವು ಟ್ವೀಟ್ ಗಳು ವ್ಯಕ್ತವಾಗಿವೆ.

ಕರ್ನಾಟಕ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ರಾಷ್ಟ್ರದ ಹಲವು ನಾಯಕರು ಮನಮೋಹನ್ ಸಿಂಗ್ ಅವರ ಶೀಘ್ರ ಚೇತರಿಕೆ, ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಸದ್ಯ ಡಾ.ಮನಮೋಹನ್ ಸಿಂಗ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಡಾ. ನಿತೀಶ್ ನಾಯ್ಕ್ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ. ವಿರೋಧ ಪಕ್ಷ ಕಾಂಗ್ರೆಸ್ ನ ನಾಯಕರಾಗಿರುವ ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. 2009 ರಲ್ಲಿ ಡಾ. ಸಿಂಗ್ ಅವರಿಗೆ ಏಮ್ಸ್ ನಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು.

Web Title : Former PM Manmohan Singh admitted to AIIMS